ಮುಖಪುಟ /ಸುದ್ದಿ ಸಮಾಚಾರ   

ಫೆಬ್ರವರಿ 21ರಂದು ಬಿಬಿಎಂಪಿ ಚುನಾವಣೆ

bbmp electionಬೆಂಗಳೂರು, ಡಿ.8: ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ದಿನಾಂಕವನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಫೆಬ್ರವರಿ 21ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣೆ ಆಯೋಗದ ಮುಖ್ಯ ಚುನಾವಣಾಧಿಕಾರಿ ಚಿಕ್ಕಮಠ್ ತಿಳಿಸಿದ್ದಾರೆ..

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 66ಲಕ್ಷ 17ಸಾವಿರದ 379 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ಫೆಬ್ರವರಿ 1ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, 9ರಂದು ನಾಮಪತ್ರ ಪರಿಶೀಲನೆ, ಫೆ.11 ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿರುತ್ತದೆ, ಫೆ. 24ರಂದು ಮತ ಎಣಿಕೆ ನಡೆಯಲಿದ್ದು ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಜನವರಿ 15ರಿಂದ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಮತದಾನಕ್ಕಾಗಿ 6598 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಅಭ್ಯರ್ಥಿಗಳು ಚುನಾವಣೆಗೆ ಮಾಡುವ ವೆಚ್ಚದ ಬಗ್ಗೆ ತೀವ್ರ ನಿಗಾ ಇಡಲಾಗುವುದು. ಇದಕ್ಕಾಗಿ 160 ಚುನಾವಣಾ ವೀಕ್ಷಕರು ಮತ್ತು 110 ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದೂ ಅವರು ತಿಳಿಸಿದರು.

ಡಿಸೆಂಬರ್ 7ರೊಳಗೆ ಬಿಬಿಎಂಪಿ ಚುನಾವಣೆ ದಿನಾಂಕ ಪ್ರಕಟಿಸುವಂತೆ ರಾಜ್ಯ ಹೈಕೋರ್ಟ್ ಗಡುವು ವಿಧಿಸಿದ್ದ ಹಿನ್ನೆಲೆಯಲ್ಲಿ ಇಂದು ಬಿಬಿಎಂಪಿ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಲಾಗಿದೆ.

 ಮುಖಪುಟ /ಸುದ್ದಿ ಸಮಾಚಾರ