ಮುಖಪುಟ /ಸುದ್ದಿ ಸಮಾಚಾರ 

ಪ್ರಮುಖರ ಮತದಾನ

Jagadesh Shetterಬೆಂಗಳೂರು, ಮೇ ೫: ವಿವಿಧ ರಾಜಕೀಯ ಪಕ್ಷಗಳ ನಾಯಕರುಚಿತ್ರತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರು ಸರತಿ ಸಾಲಿನಲ್ಲಿ ನಿಂತು ಇಂದು ಮತದಾನ ಮಾಡಿದರು.

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಪತ್ನೀಕರಾಗಿ ಹುಬ್ಬಳ್ಳಿಯ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಅವರೊಂದಿಗೆ ಶಿಕಾರಿಪುರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ನಿ ಚೆನ್ನಮ್ಮ, ಪುತ್ರ ರೇವಣ್ಣ ಅವರೊಂದಿಗೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕು, ಪಡುವಲ ಹಿಪ್ಪೆ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ರಾಮನಗರ ಜಿಲ್ಲೆ, ಬಿಡದಿ ಬಳಿಯ ಕೇತಮಾರನಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸಹ ಅವರ ಪತ್ನಿ ಡಾಟಿ ಮತ್ತು ಪುತ್ರರೊಂದಿಗೆ ಪುತ್ತೂರು ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಲ್ಲಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತುಮಕೂರಿನ ಹೆಗ್ಗೆರೆ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ತೆರದಾಳ ಕ್ಷೇತ್ರದ ಅಭ್ಯರ್ಥಿಯಾಗಿರುವ ಚಿತ್ರನಟಿ ಉಮಾಶ್ರಿ ತಮ್ಮ ಕ್ಷೇತ್ರದಲ್ಲಿ ಮತ ಚಲಾಯಿಸಿದರು.

ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಗುಲ್ಬರ್ಗಾದಲ್ಲಿ ಮತ ಚಲಾಯಿಸಿದರೆ, ವೀರಪ್ಪ ಮೊಯ್ಲಿ ಬೆಂಗಳೂರಿನಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಂಡ್ಯ ಜಿಲ್ಲೆ ಸೋಮನಹಳ್ಳಿಯಲ್ಲಿ ಮತದಾನ ಮಾಡಿದರು.

ಮುಖಪುಟ /ಸುದ್ದಿ ಸಮಾಚಾರ