ಮುಖಪುಟ /ಸುದ್ದಿ ಸಮಾಚಾರ   
 

ಯಡಿಯೂರಪ್ಪ ಅವರಿಗೆ ಚುನಾವಣಾ ಆಯೋಗದ ನೋಟಿಸ್
ನೀತಿ ಸಂಹಿತೆ ಉಲ್ಲಂಘನೆ ಆರೋಪ- ಸೆ.6ರೊಳಗೆ ಉತ್ತರ ನೀಡಲು ಸೂಚನೆ

ಮುಖ್ಯಮಂತ್ರಿ ಯಡಿಯೂರಪ್ಪಬೆಂಗಳೂರು, ಸೆ.4:  ಗುಲ್ಬರ್ಗಾ ದಕ್ಷಿಣ ಹಾಗೂ ಕಡೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಪ್ರಕಟವಾದ ಬಳಿಕ, ಆದಿ ಬಣಜಿಗ ಜನಾಂಗವನ್ನು ಎರಡು ಎ ಪ್ರವರ್ಗಕ್ಕೆ ಸೇರ್ಪಡೆ ಮಾಡುವುದಾಗಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ವಿವರಣೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೇಂದ್ರ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ.

ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ನೀಡಿದ ಈ ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದ್ದು, ನಾಡಿದ್ದು (ಸೆ.೬) ಬೆಳಗ್ಗೆ ೧೧ ಗಂಟೆಯೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಈ ಸಂಬಂಧ ಹೇಳಿಕೆ ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿತ್ತು. ಕೇಂದ್ರ ಚುನಾವಣಾ ಆಯೋಗ ಇಂದು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು, ಮುಖ್ಯಮಂತ್ರಿ ಯಾವ ರೀತಿ ಸಮಜಾಯಿಷಿ ನೀಡುತ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ.

ಪ್ರತಿಪಕ್ಷಗಳು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಇಂಥ ಆಶ್ವಾಸನೆ ನೀಡಿದ್ದಾರೆ ಎಂದು ಆರೋಪಿಸಿದ ಸಂದರ್ಭದಲ್ಲಿ ಸಮಜಾಯಿಷಿ ನೀಡಿದ್ದ ಯಡಿಯೂರಪ್ಪ, ಈ ವಿಚಾರ ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಬಂದಿತ್ತು ಎಂದಷ್ಟೇ ತಿಳಿಸಿದ್ದಾಗಿ ಸ್ಪಷ್ಟಪಡಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. 

 

 ಮುಖಪುಟ /ಸುದ್ದಿ ಸಮಾಚಾರ